
ಬೆಂಗಳೂರು: ಮಹದಾಯಿ ಮತ್ತು ಕಳಸಾ-ಬಂಡೂರಿ ನಾಲಾ ಯೋಜನೆಯ ಅನುಷ್ಠಾನ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಮತ್ತೆ ಕೇಂದ್ರ ಸರ್ಕಾರದ ಮೊರೆ ಹೋಗುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಾಮಾಜಿಕ ಆರ್ಥಿಕ ಮತ್ತು ಜಾತಿ ಗಣತಿ-2011 ರ ದತ್ತಾಂಶ ಮತ್ತು ವರದಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ನ್ಯಾಯಾಧೀಕರಣದ ಹೊರಗೆ ವಿವಾದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ. ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಚರ್ಚಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಲಾಗಿದೆ. ನಿಯೋಗ ತೆರಳಿ ಒಂದು ತಿಂಗಳಾಯ್ತು, ಇದುವರೆಗೂ ಪ್ರಧಾನಿ ಅವರು ಯಾವುದೇ ಕ್ರಮ ಕೈಗೊಂಡಿಲ್ಲ. ಕ್ರಮ ಕೈಗೊಳ್ಳಬಹುದೆಂಬ ಭರವಸೆಯಲ್ಲಿ ನಾವಿದ್ದೇವೆ ಎಂದು ಅವರು ಹೇಳಿದರು.
ಇದೇ ವೇಳೆ ಕೇಂದ್ರ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಈ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಯಾವ ನಿರ್ಧಾರ ಕೈಗೊಳ್ಳಬೇಕು ಮತ್ತು ಮುಂದೆ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಮತ್ತೊಮ್ಮೆ ಸರ್ವಪಕ್ಷಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು.
ಸೋನಿಯಾ ಗಾಂಧಿ ಪ್ರಧಾನಿಯಲ್ಲ
ವಿವಾದದಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದು, ಅನಾವಶ್ಯಕವಾಗಿ ಕೇಂದ್ರ ನಾಯಕರನ್ನು ದೂಷಿಸುತ್ತಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಬಳಿಗೆ ನಿಯೋಗ ಕರೆದೊಯ್ಯಬೇಕು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಆದರೆ ಸೋನಿಯಾ ಗಾಂಧಿ ಅವರೇನು ಪ್ರಧಾನಿ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಅವರ ಬಳಿಗೆ ಹೋಗಿ ಅವರು ಮಧ್ಯ ಪ್ರವೇಶಿಸುವಂತೆ ಮನವೊಲಿಸುವುದನ್ನು ಬಿಟ್ಟು ಸರ್ಕಾರದ ವಿರುದ್ಧ ಇಲ್ಲ-ಸಲ್ಲದ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
"17 ಜನ ಬಿಜೆಪಿ ಸಂಸದರಿದ್ದಾರೆ. ನಾಲ್ಕು ಜನ ಕೇಂದ್ರ ಸಚಿವರಿದ್ದಾರೆ. ಅವರೆಲ್ಲಾ ಪ್ರಧಾನಿ ಮೋದಿ ಅವರ ಮೇಲೆ ಒತ್ತಡ ಹೇರಿ ವಿವಾದ ಬಗೆಹರಿಸುವಂತೆ ಮನವಿ ಮಾಡಿಕೊಡಬೇಕು. ನಾವೆಂದೂ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿಲ್ಲ. ಬಿಜೆಪಿಯವರು ಅನಗತ್ಯವಾಗಿ ಈ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ನೆಲ-ಜಲ-ಗಡಿ ವಿಚಾರದಲ್ಲಿ ಮೊದಲಿನಿಂದಲೂ ಒಂದೇ ನಿಲುವು ತಾಳಿದ್ದು, ಮುಂದೆಯೂ ಅದೇ ನಿಲುವು ಮುಂದುವರೆಸಲಾಗುವುದು" ಎಂದು ಹೇಳಿದರು.
ರಾಹುಲ್, ದಿಗ್ವಿಜಯ್ ಸಿಂಗ್ ಬಂದ ಬಳಿಕ ಸಂಪುಟ ವಿಸ್ತರಣೆ
ಇನ್ನು ಇದೇ ವೇಳೆ ರಾಜ್ಯ ಸಂಪುಟ ವಿಸ್ತರಣೆ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು, ತಾವು ಇತ್ತೀಚೆಗೆ ದೆಹಲಿಗೆ ತೆರಳಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ದಿಗ್ವಿಜಯಸಿಂಗ್ ಅವರು ವಿದೇಶ ಪ್ರವಾಸದಲ್ಲಿದ್ದರು. ಹೀಗಾಗಿ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲು ಸಾಧ್ಯವಾಗಲಿಲ್ಲ. ಅವರು ಬಂದ ಬಳಿಕ ಮತ್ತೊಮ್ಮೆ ದೆಹಲಿಗೆ ತೆರಳಿ ಚರ್ಚೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು.
Advertisement