ಬೆಂಗಳೂರು: ಈ ತಿಂಗಳು ಅಂತ್ಯದೊಳಗೆ ರಾಜ್ಯ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ.
ಇಂದು ಕೋರಮಂಗಲದ ಕೆಎಸ್‌ಆರ್‌ಪಿ ಪರೇಡ್ ಮೈದಾನದಲ್ಲಿ ನಡೆದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಈ ತಿಂಗಳೊಳಗೆ ಸಂಪುಟ ವಿಸ್ತರಣೆ ಮಾಡುತ್ತೇವೆ ಎಂದರು. ಅಲ್ಲದೆ ಸಂಪುಟದಿಂದ ಯಾರನ್ನು ಕೈಬಿಡಬೇಕು, ಯಾರನ್ನು ಸಂಪುಟಕ್ಕೆ ಸೇರಿಸಬೇಕು ಎಂಬುದರ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನಿಸಲಾಗುವುದು ಎಂದರು.
ಇದೇ ವೇಳೆ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಈಗಾಗಲೇ ಸಿಐಡಿ ಪ್ರಕರಣದ ತನಿಖೆ ನಡೆಸುತ್ತಿದ್ದು, ಆರೋಪಿಗಳು ಯಾರೇ ಇರಲಿ .ಅಧಿಕಾರಿಗಳು ಇರಲಿ, ರಾಜಕಾರಣಿಗಳೆ ಇರಲಿ ಅವರ ವಿರುದ್ಧ ಕಾನೂನಿನನ್ವಯ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದರು.
ಜಿಲ್ಲಾ ಹಾಗೂ ತಾಲೂಕ ಪಂಚಾಯತ್ ಚುನಾವಣೆ ಫಲಿತಾಂಶದ ಬಗ್ಗೆ ಹೈಕಮಾಂಡ್ ಗೆ ವರದಿ ನೀಡುವ ಸಂದರ್ಭದಲ್ಲಿ ಬಜೆಟ್ ನಂತರ ಸಂಪುಟ ಪುನಾರಚಿಸುವ ಪ್ರಸ್ತಾವನ್ನು ಸಿಎಂ ಮುಂದಿಟ್ಟದ್ದರು. ಇದಕ್ಕೆ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದ್ದ ಹೈಕಮಾಂಡ್, ಬಜೆಟ್ ಅಧಿವೇಶನದ ನಂತರ ದೆಹಲಿಗೆ ಬರುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಈಗ ಸಂಪುಟ ಪನಾರಚನೆಗೆ ಮುಂದಾಗಿರುವ ಸಿದ್ದರಾಮಯ್ಯ ಅನುಭವಿಗಳು ಹಾಗೂ ಪರಿಣಿತರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಸಮರ್ಥ ತಂಡ ಕಟ್ಟಿಕೊಳ್ಳಲು ಮುಂದಾಗಿದ್ದಾರೆ.