ಬೆಂಗಳೂರು: ದ್ವಿತೀಯ ಪಿಯುಸಿ ರಸಾಯನಶಾಸ್ತ್ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿರುವ ಸಿಐಡಿ, ಬುಧವಾರ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಪೂರ್ಣಪ್ರಜ್ಞ ಪಿಯು ಕಾಲೇಜ್ ನ ದೈಹಿಕ ಶಿಕ್ಷಕ, ಮಲ್ಲೇಶ್ವರಂ ನಿವಾಸಿ ಅನಿಲ್ ಹಾಗೂ ಬೆಂಗಳೂರಿನ ಮತ್ತಿಕೆರೆಯಲ್ಲಿರುವ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕ ಸತೀಶ್ ನನ್ನು ಇಂದು ಸಿಐಡಿ ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ತೀವ್ರ ವಿಚಾರಣೆಗೊಳಪಡಿಸಿದೆ.
ಪ್ರಶ್ನೆ ಪತ್ರಿಕೆ ಮಾರಾಟ ಜಾಲದಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಅನಿಲ್ ಹಾಗೂ ಸತೀಶ್ ನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಈಗಾಗಲೇ ಸಚಿವರೊಬ್ಬರ ವಿಶೇಷ ಅಧಿಕಾರಿ ಸೇರಿದಂತೆ ಪ್ರಮುಖ ಮೂವರು ಆರೋಪಿಗಳನ್ನು ಬಂಧಿಸಿದ್ದ ಸಿಐಡಿ ಈಗ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ದಂಧೆಯು ಹಲವು ವರ್ಷಗಳಿಂದ ನಡೆಯುತ್ತಿದ್ದು, ಅದರಲ್ಲಿ ಹಲವು ಟ್ಯೂಟೋರಿಯಲ್‌ಗಳು ಹಾಗೂ ಶಿಕ್ಷಕರು ಭಾಗಿಯಾಗಿರುವ ಮಾಹಿತಿ ದೊರೆತಿದೆ, ಅದನ್ನು ಆಧರಿಸಿ ಕಾರ್ಯಾಚರಣೆ ನಡೆಸಿರುವ ಸಿಐಡಿ, ಹಲವು ಅಧಿಕಾರಿಗಳು ಮತ್ತು ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದೆ.
ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಗುಬ್ಬಿ ತಾಲ್ಲೂಕಿನ ಕಾಗೇರಿಯ ಶಿವಕುಮಾರ್ ಅಲಿಯಾಸ್ ಶಿವಕುಮಾರಸ್ವಾಮಿ ಪ್ರಮುಖ ಪಾತ್ರವಹಿಸಿರುವುದು ಪತ್ತೆಯಾಗಿದೆ. ಹಲವು ವರ್ಷಗಳಿಂದ ದಂಧೆ ನಡೆಸುತ್ತಿರುವ ಈತ ಮೊದಲು ಉಪನ್ಯಾಸಕನಾಗಿರುವುದು ಗೊತ್ತಾಗಿದ್ದು ಈಗ ತಲೆ ಮರೆಸಿಕೊಂಡಿರುವ ಆತನಿಗಾಗಿ ಸಿಐಡಿ ತೀವ್ರ ಶೋಧ ನಡೆಸುತ್ತಿದೆ.