ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಿಡುವಿಲ್ಲದ ನಿಗದಿತ ಕಾರ್ಯಕ್ರಮಗಳನ್ನು ರದ್ದು ಮಾಡಿ ಏಪ್ರಿಲ್ 15ರಿಂದ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.
ಸಿದ್ದರಾಮಯ್ಯ ಅವರು ಏ.15ರಂದು ಬೀದರ್, ಕಲಬುರಗಿ ಹಾಗೂ ಏ.16ರಂದು ರಾಯಚೂರು, ಯಾದಗಿರಿ ಬರಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಅಲ್ಲದೆ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪ್ರಗತಿ ಪರಿಶೀಲನಾ ಸಭೆ ಸಹ ನಡೆಸಲಿದ್ದಾರೆ ಎನ್ನಲಾಗಿದೆ.
ಇತ್ತೀಚಿಗಷ್ಟೆ ಯಡಿಯೂರಪ್ಪ ಅವರಿಗೆ ರಾಜ್ಯ ಬಿಜೆಪಿ ಸಾರಥ್ಯ ನೀಡಿಲಾಗಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವುದೇ ತನ್ನ ಗುರಿ ಎಂದು ಮಾಜಿ ಸಿಎಂ ಹೇಳಿದ್ದರು.
ಬಿಎಸ್ ವೈ ರಾಜ್ಯ ಪ್ರವಾಸದ ಹೇಳಿಕೆ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಪಾಳಯ ತಿರುಗೇಟು ನೀಡಲು ಸಜ್ಜಾಗಿದ್ದು, ಆ ಹಿನ್ನೆಲೆಯಲ್ಲಿ ಸಿಎಂ ಬರಪೀಡಿತ ಜಿಲ್ಲಾ ಪ್ರವಾಸ ಕೈಗೊಂಡಿರುವುದಾಗಿ ವಿಶ್ಲೇಷಿಸಲಾಗುತ್ತಿದೆ.