ಮಹದಾಯಿ ವಿವಾದ: ಮೂರು ರಾಜ್ಯಗಳ ಸಭೆ ಕರೆಯುವಂತೆ ಪ್ರಧಾನಿಗೆ ಸಿಎಂ ಪತ್ರ

ರಾಜ್ಯದಲ್ಲಿ ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದ್ದು,...
ಸಿದ್ದರಾಮಯ್ಯ - ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಸಿದ್ದರಾಮಯ್ಯ - ನರೇಂದ್ರ ಮೋದಿ (ಸಂಗ್ರಹ ಚಿತ್ರ)
ಬೆಂಗಳೂರು: ರಾಜ್ಯದಲ್ಲಿ ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ನಡೆಯುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದ್ದು, ಸಮಸ್ಯೆ ಪರಿಹಾರಕ್ಕೆ ಮೂರು ರಾಜ್ಯಗಳ ಸಭೆ ಕರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಮಹದಾಯಿ ನದಿ ನೀರಿನ ಹಂಚಿಕೆ ವಿವಾದವನ್ನು ಮಾತುಕತೆಯ ಮೂಲಕವೇ ಪರಿಹರಿಸಿಕೊಳ್ಳಬೇಕಾಗಿದ್ದು, ಇದಕ್ಕೆ ಗೋವಾ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಹೀಗಾಗಿ ನೀವೇ ಮಧ್ಯಸ್ಥಿಕೆ ವಹಿಸಿ, ನಿಮ್ಮ ನೇತೃತ್ವದಲ್ಲೇ ಸಮಸ್ಯೆ ಪರಿಹಾರಕ್ಕೆ ಯತ್ನಿಸಿ ಎಂದು ಸಿಎಂ ಪ್ರಧಾನಿಗೆ ಮನವಿ ಮಾಡಿದ್ದಾರೆ. ಅಲ್ಲದೆ ಈ ಸಂಬಂಧ ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯುವಂತೆ ಒತ್ತಾಯಿಸಿದ್ದಾರೆ.
ಈ ಹಿಂದೆಯೂ ಏಪ್ರಿಲ್ 26, 2016ರಂದು ಈ ಸಂಬಂಧ ತಮಗೆ ಪತ್ರ ಬರೆದಿದ್ದನ್ನು ತಮ್ಮ ಗಮನಕ್ಕೆ ತರಲು ಬಯಸುತ್ತೇನೆ. ಮಧ್ಯಂತರ ತೀರ್ಪಿನ ನಂತರ ರಾಜ್ಯದಲ್ಲಿ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಪರಿಸ್ಥಿತಿ ಶಾಂತವಾಗಿದೆ. ಆದರೆ ಮತ್ತೆ ಹೋರಾಟ ಮಾಡುವ ಸಾಧ್ಯತೆಯೂ ಇದೆ ಎಂದು ಸಿಎಂ ಹೇಳಿದ್ದಾರೆ.
ಧಾರವಾಡ, ಗದಗ, ಬೆಳಗಾವಿ ಹಾಗೂ ಬಾಗಲಕೋಟೆ ಸೇರಿದಂತೆ ನಾಲ್ಕೂ ಜಿಲ್ಲೆಗಳಲ್ಲಿ ಈ ಬಾರಿಯೂ ಮಳೆ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ರೈತರು ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಈ ಭಾಗದ ರೈತರಿಗೆ ನೀರಿನ ಅಗತ್ಯ ಇದೆ ಎಂದು ಸಿಎಂ ತಮ್ಮ ಪತ್ರದಲ್ಲಿ ಮನವರಿಕೆ ಮಾಡಿಕೊಟ್ಟಿದ್ದಾರೆ.
ನದಿ ನೀರು ಹಂಚಿಕೆ ವಿವಾದವನ್ನು ನ್ಯಾಯಾಧೀಕರಣದ ಹೊರಗೆ ಬಗೆಹರಿಸಿಕೊಳ್ಳುವ ನಮ್ಮ ಪ್ರಸ್ತಾವನೆಗೆ ಗೋವಾ ರಾಜ್ಯ ಒಪ್ಪಿಗೆ ಕೊಟ್ಟಿಲ್ಲ. ನಿಮ್ಮ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಯಲಿದೆ ಎಂಬುದು ನಮ್ಮ ಭರವಸೆಯಾಗಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com