ಬೆಂಗಳೂರು: ಜೆಎನ್ ಯು ಮಾದರಿಯಲ್ಲೇ ಕಾಶ್ಮೀರ ಕುರಿತು ಚರ್ಚೆ ನಡೆಸಿ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ್ದ ಆರೋಪ ಸಂಬಂಧ ಬೆಂಗಳೂರಿನ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ "ದೇಶದ್ರೋಹ ಪ್ರಕರಣ" ದಾಖಲು ಮಾಡಿಕೊಳ್ಳಲಾಗಿದೆ.
ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ನಡೆದ ವಿಶೇಷ ಕಾರ್ಯಾಗಾರದಲ್ಲಿ ಪ್ರಚೋದನಾತ್ಮಕ ಭಾಷಣ, ಆಜಾದಿ ಪರ ಘೋಷಣೆ ಮತ್ತು ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ ಆರೋಪದ ಮೇರೆಗೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಮೂಲಗಳ ಪ್ರಕಾರ ಸಂಸ್ಥೆಯ ವಿರುದ್ಧ ದೇಶದ್ರೋಹ ಪ್ರಕರಣ ಸೇರಿದಂತೆ ವಿವಿಧ ಐಪಿಸಿ ಸೆಕ್ಷನ್ ಗಳಡಿಯಲ್ಲಿ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಜೆಸಿ ನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿರುವಂತೆ ಈಗಾಗಲೇ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಎಫ್ ಐಆರ್ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ವಿದ್ಯಾರ್ಥಿ ಸಂಘಟನೆಗಳು ಮತ್ತು ಪ್ರಾಥಮಿಕ ತನಿಖಾ ವರದಿಯನ್ವಯ ಸಂಸ್ಥೆ ವಿರುದ್ಧ ಐಪಿಸಿ ಸೆಕ್ಷನ್ 142 (ಕಾನೂನು ಬಾಹಿರ ಸಭೆ ನಡೆಸುವುದು), 143, 147 (ಕೋಮ ಗಲಭೆಗೆ ಪ್ರಚೋದನೆ), 124 ಎ (ದೇಶದ್ರೋಹ), 153ಎ (ವಿವಿಧ ಕೋಮಿನ ನಡುವೆ ಶುತೃತ್ವ ಬೆಳೆಸಲು ಪ್ರಚೋದನೆ) ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕಳೆದ ಆಗಸ್ಟ್ 13 ರ ರಾತ್ರಿ ಬೆಂಗಳೂರಿನ ಮಿಲ್ಲರ್ಸ್ ರಸ್ತೆಯಲ್ಲಿರುವ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ಕಾರ್ಯಾಗಾರ ಆಯೋಜಿಸಿತ್ತು. ಈ ವೇಳೆ ಅಲ್ಲಿ ಪಾಲ್ಗೊಂಡಿದ್ದ ಕೆಲ ಕಾಶ್ಮೀರಿಗಳು ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ್ದರು. ಈ ವಿಚಾರ ತಿಳಿದ ವಿದ್ಯಾರ್ಥಿ ಸಂಘಟನೆಗಳ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿ ಕಾಲೇಜಿನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು.
Advertisement