ಬೆಂಗಳೂರು: ಅಬಕಾರಿ ಸಚಿವ ಎಚ್.ವೈ.ಮೇಟಿ ವಿರುದ್ಧದ ರಾಸಲೀಲೆ ಸಿಡಿ ಮತ್ತು ಜೀವ ಬೆದರಿಕೆ ಆರೋಪ ಸಾಬೀತಾದರೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಿದೆ ಎಂದು ಭಾನುವಾರ ಕೆಪಿಸಿಸಿ ಅಧ್ಯಕ್ಷ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದ್ದಾರೆ.
ಸಚಿವರ ವಿರುದ್ಧದ ರಾಸಲೀಲೆ ಆರೋಪಕ್ಕೆ ಸಂಬಂಧಿಸಿದಂತೆ ಇಂದು ವರದಿಗಾರರಿಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಆ ಬಗ್ಗೆ ನನಗೆ ಇನ್ನೂ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಸಚಿವರ ಬೆಂಬಲಿಗರು ಆರ್ ಟಿಐ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಆರೋಪ ಸಾಬೀತಾದರೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಒಂದು ವೇಳೆ ಸಿಡಿ ಬಿಡುಗಡೆಯಾದರೆ ಅವರಿಂದ ರಾಜಿನಾಮೆ ಪಡೆಯುತ್ತೀರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಸಚಿವರ ರಾಜಿನಾಮೆ ಪಡೆಯುವುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು.
ಸಚಿವರ ರಾಸಲೀಲೆ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪರಮೇಶ್ವರ ಇಬ್ಬರಿಗೂ ಮೊದಲೇ ಮಾಹಿತಿ ಇದ್ದು, ಒಂದು ವೇಳೆ ಸಿಡಿ ಬಿಡುಗಡೆಯಾದರೆ ನೀವು ರಾಜಿನಾಮೆ ನೀಡಬೇಕಾಗುತ್ತದೆ ಎಂದು ಈಗಾಗಲೇ ಮೇಟಿ ಅವರಿಗೆ ಸಿಎಂ ಸೂಚಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.