ಪಂಚಾಯತ್ ಫಲಿತಾಂಶ ನಮ್ಮ ನಿರೀಕ್ಷೆಗೆ ತಕ್ಕಂತೆ ಬಂದಿಲ್ಲ: ಸಿಎಂ

ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಚುನಾವಣೆ....
ಸಿದ್ದರಾಮಯ್ಯ
ಸಿದ್ದರಾಮಯ್ಯ
ಬೆಂಗಳೂರು: ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಚುನಾವಣೆ ಫಲಿತಾಂಶ ನಮ್ಮ ನಿರೀಕ್ಷೆಗೆ ತಕ್ಕಂತೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಚುನಾವಣೆ ಫಲಿತಾಂಶ ಪ್ರಕಟಗೊಂಡ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಮತದಾರರ ತೀರ್ಪನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಫಲಿತಾಂಶ ರಾಜ್ಯ ಸರ್ಕಾರದ ಕಾರ್ಯಕ್ರಮಗಳಿಗೆ ಮಾನದಂಡ ಅಲ್ಲ. ಕಳೆದ ಚುನಾವಣೆಗಿಂತ ಈ ಬಾರಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದೇವೆ. ನಾವು ಇನ್ನೂ ಜನರ ವಿಶ್ವಾಸ ಉಳಿಸಿಕೊಂಡಿದ್ದೇವೆ ಎಂದರು.
ಈ ಚುನಾವಣೆ ಫಲಿತಾಂಶ ಜನಾದೇಶವೂ ಅಲ್ಲ ಮತ್ತು ಮುಂದಿನ ಚುನಾವಣೆಗೆ ದಿಕ್ಸೂಚಿಯೂ ಅಲ್ಲ. ಆದರೆ ನಮ್ಮ ನಿರೀಕ್ಷೆಗೆ ತಕ್ಕಂತೆ ಫಲಿತಾಂಶ ಬಂದಿಲ್ಲ ಅಷ್ಟೆ ಎಂದು ಸಿಎಂ ಹೇಳಿದರು.
ಕಾಂಗ್ರೆಸ್ 496 ಜಿಲ್ಲಾ ಪಂಚಾಯತ್ ನಲ್ಲಿ ಗೆಲುವು ಸಾಧಿಸಿದರೆ, ಬಿಜೆಪಿ 410 ಕ್ಷೇತ್ರಗಳಲ್ಲಿ ಮಾತ್ರ ಗೆಲವು ಸಾಧಿಸಿದೆ. ಇನ್ನು ತಾಲೂಕ ಪಂಚಾಯತ್ ನಲ್ಲೂ ಕಾಂಗ್ರೆಸ್ ಸುಮಾರ್ 1700 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿಗಿಂತ 350ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದುಕೊಂಡಿದ್ದೇವೆ ಎಂದರು.
ಇದೇ ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾಗಿರುವ ಜಿಲ್ಲಾ ಪಂಚಾಯತ್ ಗಳಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಪಕ್ಷೇತರರೊಂದಿಗೆ ಹಾಗೂ ಜಾತ್ಯಾತೀತ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬಜೆಟ್ ನಂತರ ಸಂಪುಟ ಪುನಾರಚನೆ
ನನ್ನ ಸಂಪುಟದಲ್ಲಿ ಎಲ್ಲಾ ಸಚಿವರು ಸಮರ್ಥರಿದ್ದಾರೆ. ಅಸಮರ್ಥರು ಯಾರೂ ಇಲ್ಲ. ಆದರೆ ಬೇರೆಯವರಿಗೆ ಅವಕಾಶ ನೀಡುವ ಉದ್ದೇಶದಿಂದ ಬಜೆಟ್ ನಂತರ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ತಿಳಿಸಿದರು. ಆದರೆ ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ಮೊದಲಿನಿಂದಲೂ ಸಂಪುಟ ವಿಸ್ತರಣೆ ಮಾಡುವ ಪ್ರಸ್ತಾಪ ಇದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com