ಮಹದಾಯಿ ತೀರ್ಪು ವಿರೋಧಿಸಿ ಪ್ರತಿಭಟನೆ, ಸಂಸದರ ಕಚೇರಿ ಸೇರಿ ವಿವಿಧ ಕಚೇರಿಗಳ ಮೇಲೆ ಕಲ್ಲು ತೂರಾಟ

ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಧಾರವಾಡ, ಬೆಳಗಾವಿ, ಹಾವೇರಿ ಹಾಗೂ ಗದಗ ಸೇರಿದಂತೆ ಉತ್ತರ ಕರ್ನಾಟಕದ ಹಲವು...
ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ
ಹುಬ್ಬಳ್ಳಿಯಲ್ಲಿ ರೈತರ ಪ್ರತಿಭಟನೆ
ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಧಾರವಾಡ, ಬೆಳಗಾವಿ, ಹಾವೇರಿ ಹಾಗೂ ಗದಗ ಸೇರಿದಂತೆ ಕರ್ನಾಟಕದ ಹಲವು ಭಾಗಗಳಲ್ಲಿ ಕನ್ನಡಪರ ಸಂಘಟನೆಗಳು ಹಾಗೂ ರೈತರು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಉತ್ತರ ಕರ್ನಾಟಕ ಭಾಗದ ಸಂಸದರ ಕಚೇರಿಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳ ಕಲ್ಲು ತೂರಾಟ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಕರ್ನಾಟಕ 7.65 ಟಿಎಂಸಿ ನೀರು ಬಳಕೆಗೆ ಅವಕಾಶ ಕೋರಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಮಹದಾಯಿ ನ್ಯಾಯಾಧಿಕರಣ ಪೀಠ ಇಂದು ತಿರಸ್ಕರಿಸಿದೆ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು ಎಂದು ಬೆಳಗಾವಿ, ಹುಬ್ಬಳ್ಳಿ, ನರಗುಂದ, ಬೆಟಗೇರಿಯಲ್ಲಿ ರೈತರು ಬೀದಿಗಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಕನ್ನಡ ಪರ ಸಂಘಟನೆಗಳು ನಿಷೇಧಾಜ್ಞೆಯ ನಡುವೆಯೂ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿವೆ. ರಾಜ್ಯಕ್ಕೆ ಅನ್ಯಾಯವಾಗಿರುವುದನ್ನು ಖಂಡಿಸಿ ಗುರುವಾರ ಉತ್ತರಕರ್ನಾಟಕ ಬಂದ್ ಗೆ ಕಳಸಾ ಬಂಡೂರಿ ಹೋರಾಟ ಸಮಿತಿ ಕರೆ ನೀಡಿದೆ.
ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ರೈತ ಸಂಘಟನೆ ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸುತ್ತಿವೆ.
ಗದಗದಲ್ಲಿ ಸಂಸದ ಶಿವಕುಮಾರ್ ಉದಾಸಿ ಕಚೇರಿ ಮೇಲೆ ದಾಳಿ
ಮಹದಾಯಿ ನ್ಯಾಯಾಧಿಕರಣ ತೀರ್ಪು ಹೊರ ಬಿಳುತ್ತಿದ್ದಂತೆ ಆಕ್ರೋಶಗೊಂಡ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಗದಗದಲ್ಲಿರುವ ಬಿಜೆಪಿ ಸಂಸದ ಶಿವಕುಮಾರ್ ಉದಾಸಿ ಅವರ ಕಚೇರಿ ಮೇಲೆ ದಾಳಿ, ಕಚೇರಿಯ ಪಿಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ.
ನವಲಗುಂದದಲ್ಲಿ ಅಘೋಷಿತ ಬಂದ್
ಮಹದಾಯಿ ತೀರ್ಪಿನ ವಿರುದ್ಧ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಅಘೋಷಿತ ಬಂದ್ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರಿ ಹಾಗೂ ವಿವಿಧ ಕಚೇರಿಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಬೈಲಹೊಂಗದಲ್ಲಿಯೂ ಅಘೋಷಿತ ಬಂದ್, ಅಂಗಡಿ, ಮುಂಗಟ್ಟು ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
ತುಮಕೂರಿನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ
ಮಹದಾಯಿ ನ್ಯಾಯಾಧಿಕರಣ ತೀರ್ಪು ವಿರೋಧಿಸಿ ತುಮಕೂರಿನಲ್ಲೂ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನೆಗೆ ಬೆಂಬಲ ನೀಡುವಂತೆ ವಿವಿಧ ಸಂಘಟನೆಗಳಿಗೆ ಕೋಡಿಹಳ್ಳಿ ಚಂದ್ರಶೇಖರ್ ಕರೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com