ಪಿಒಕೆಯಲ್ಲಿ ಪಾಕ್-ಚೀನಾ ಆರ್ಥಿಕ ಕಾರಿಡಾರ್ ಗೆ ಭಾರತದ ವಿರೋಧ
ನವದೆಹಲಿ: ಪಾಕಿಸ್ತಾನ ಮತ್ತು ಚೀನಾ ಸರ್ಕಾರಗಳು ಜಂಟಿಯಾಗಿ ರಚನೆ ಮಾಡ ಬಯಸಿರುವ ಆರ್ಥಿಕ ಕಾರಿಡಾರ್ ಯೋಜನೆಗೆ ಭಾರತ ಮತ್ತೆ ತನ್ನ ಆಕ್ಷೇಪ ವ್ಯಕ್ತಪಡಿಸಿದ್ದು, ವಿವಾದಿತ ಪ್ರದೇಶದಲ್ಲಿ ಕಾರಿಡಾರ್ ಯೋಜನೆ ಬೇಡ ಎಂದು ಭಾರತ ಖಡಕ್ ಎಚ್ಚರಿಕೆ ನೀಡಿದೆ.
ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಪ್ರದೇಶದಲ್ಲಿ ಪಾಕಿಸ್ತಾನ ಮತ್ತು ಚೀನಾ ಜಂಟಿಯಾಗಿ ಆರ್ಥಿಕ ಕಾರಿಡಾರ್ ನಿರ್ಮಿಸುವ ವಿಷಯಕ್ಕೆ ಸಂಬಂಧಿಸಿ ಭಾರತ ಮತ್ತೆ ಆಕ್ಷೇಪ ವ್ಯಕ್ತಪಡಿಸಿದ್ದು, ವಿವಾದಿತ ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶದಲ್ಲಿ ಕಾರಿಡಾರ್ ನಿರ್ಮಿಸುವಂತಿಲ್ಲ. ಅದಕ್ಕೆ ಅವಕಾಶ ನೀಡಲಾಗದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಹೇಳಿದ್ದಾರೆ.
ನವದೆಹಲಿ ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಕಾಸ್ ಸ್ವರೂಪ್ ಅವರು, ಚೀನಾ-ಪಾಕ್ ಆರ್ಥಿಕ ಕಾರಿಡಾರ್ ಕಾಮಗಾರಿ ಕೈಗೊಳ್ಳಲು ಮುಂದಾಗಿರುವ ಪ್ರದೇಶ ಭಾರತದ ಅವಿಭಾಜ್ಯ ಅಂಗ. ಜಮ್ಮು ಮತ್ತು ಕಾಶ್ಮೀರ ಹಾಗೂ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಯಾವುದೇ ವಿಷಯವನ್ನು ಒಪ್ಪಲಾಗದು. ದ್ವಿಪಕ್ಷೀಯ ವಿಚಾರಕ್ಕೆ ಸಂಬಂಧಿಸಿದ ಕಾಶ್ಮೀರ ವಿಷಯವನ್ನು ಅಂತಾರಾಷ್ಟ್ರೀಯ ವಿವಾದವನ್ನಾಗಿಸಬಾರದು ಎಂದು ಅವರು ಹೇಳಿದರು.
ಇದೇ ವೇಳೆ ಪಾಕಿಸ್ತಾನಕ್ಕೆ ಪರೋಕ್ಷ ಎಚ್ಚರಿಕೆ ನೀಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಅಕ್ರಮ ಚಟುವಟಿಕೆ ನಡೆಸುವುದನ್ನು ಪಾಕಿಸ್ತಾನ ಕೂಡಲೇ ನಿಲ್ಲಿಸಬೇಕು ಎಂದು ಹೇಳಿದರು. ಭಾರತ ಮಾತುಕತೆಯಿಂದ ಪಲಾಯನ ಮಾಡುತ್ತಿದೆ ಎಂಬ ಪಾಕ್ ರಾಷ್ಟ್ರಪತಿ ಮಮ್ನೂನ್ ಹುಸೇನ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಸ್ವರೂಪ್, ಪಾಕ್ ಪ್ರೇರಿತ ಭಯೋತ್ಪಾದನೆ ಚಟುವಟಿಕೆಯೇ ಶಾಂತಿ ಮಾತುಕತೆಗೆ ಅಡ್ಡಿಯಾಗುತ್ತಿದೆ ಪರೋಕ್ಷವಾಗಿ ಅವರಿಗೆ ಟಾಂಗ್ ನೀಡಿದರು.
ಇದೇ ವೇಳೆ ಭಾರತ-ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಮಾತುಕತೆ ಬೆಂಬಲಿಸಲು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ ಮೂನ್ ಸದಾ ಸಿದ್ಧರಿದ್ದಾರೆ ಎಂದು ಅವರ ವಕ್ತಾರ ಸ್ಟೀಫನ್ ದುಜಾರಿಕ್ ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ