ನವದೆಹಲಿ: ಮಹಾರಾಷ್ಟ್ರದಲ್ಲಿರುವ ಮದ್ದುಗುಂಡು ಡಿಪೋದಲ್ಲಿ ಭಾರಿ ಅಗ್ನಿ ಅನಾಹುತ ಸಂಭವಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರಿಗೆ ಸೂಚಿಸಿದ್ದಾರೆ.
ಇಂದು ಬೆಳಿಗ್ಗೆ ಮಹಾರಾಷ್ಟ್ರದ ವಾರ್ದಾದಲ್ಲಿರುವ ಮದ್ದುಗುಂಡು ಡಿಪೋದಲ್ಲಿ ಭಾರಿ ಬೆಂಕಿ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಅಧಿಕಾರಿಗಳು ಹಾಗೂ 15 ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದರು. ಇನ್ನು 25ಕ್ಕೂ ಹೆಚ್ಚು ಸಿಬ್ಬಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಯಿಸಿರುವ ಪ್ರಧಾನಿ ಮೋದಿ, ಡಿಪೋದಲ್ಲಿ ಅಗ್ನಿ ಅನಾಹುತದಿಂದ ಯೋಧರ ಸಾವನ್ನಪ್ಪಿರುವುದು ತುಂಬಾ ನೋವು ತಂದಿದೆ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
ಘಟನೆಯಲ್ಲಿ ಮೃತಪಟ್ಟವರ ಸಂಬಂಧಿಕರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ. ಗಾಯಗೊಂಡವರು ಶೀಘ್ರವಾಗಿ ಚೇತರಿಕೆಯಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ಘಟನೆ ಕುರಿತು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಈ ರೀತಿ ದುರಂತ ಸಂಭವಿಸಬಾರದಿತ್ತು. ಘಟನೆ ಕುರಿತು ಮಾಹಿತಿ ಕಲೆ ಹಾಕಲಾಗಿದ್ದು, ಮತ್ತೊಂದು ಅವಘಡ ಸಂಭವಿಸದಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.