"ಕಾವೇರಿ"ದ ಬಂದ್; ಕರ್ನಾಟಕ ಸಂಪೂರ್ಣ ಸ್ತಬ್ಧ

ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.
ಕರ್ನಾಟಕ ಬಂದ್ (ಸಂಗ್ರಹ ಚಿತ್ರ)
ಕರ್ನಾಟಕ ಬಂದ್ (ಸಂಗ್ರಹ ಚಿತ್ರ)

ಬೆಂಗಳೂರು: ತಮಿಳುನಾಡಿಗೆ ನೀರು ಬಿಟ್ಟ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು,  ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಪ್ರಮುಖ ಮಾರುಕಟ್ಟೆಗಳು ಸ್ತಬ್ದವಾಗಿವೆ. ಇನ್ನು ಬಂದ್ ಗೆ ಸರ್ಕಾರಿ ಸಾರಿಗೆ ಸಂಸ್ಥೆ ನೌಕರರು ಬೆಂಬಲ  ವ್ಯಕ್ತಪಡಿಸಿರುವುದರಿಂದ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ವ್ಯವಸ್ಥೆ ಸಂಪೂರ್ಣ ಸ್ತಬ್ಧವಾಗಿದೆ. ಬಂದ್ ಹಿನ್ನಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಾರಸ್ಥರು ಬೆಂಬಲ ನೀಡಿದ್ದು, ಸ್ವಯಂ  ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿ ಬಂದ್ ಗೆ ತಮ್ಮ ಬೆಂಬಲ ವ್ಯಕ್ಚಪಡಿಸಿದ್ದಾರೆ.

ಇನ್ನು ಕನ್ನಡ ಪರ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿ ತಡೆ ನಡೆಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರಮುಖವಾಗಿ ಬೆಂಗಳೂರು-ಮಂಡ್ಯ-  ಮೈಸೂರು ಹೆದ್ದಾರಿ ಬಹುತೇಕ ಸ್ತಬ್ಧವಾಗಿದ್ದು, ಪ್ರತಿಭಟನೆ ನಡೆಯುತ್ತಿರುವ ಹಿನ್ನಲೆಯಲ್ಲಿ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರು ಬದಲಿ ಮಾರ್ಗದ ಮೊರೆ ಹೋಗುತ್ತಿದ್ದಾರೆ. ಇನ್ನು ಅಲ್ಲಲ್ಲಿ ವಾಹನಗಳಿಗೆ ಹಾನಿ ಮಾಡುವ, ರಸ್ತೆ ತಡೆ ಉಂಟು ಮಾಡಿ ಸಂಚಾರಕ್ಕೆ ಅಡಚಣೆ ಮಾಡುವ ಅನೇಕ ಪ್ರಕರಣಗಳು ವರದಿಯಾಗುತ್ತಿವೆ.

ಮೈಸೂರು, ಮಂಡ್ಯ, ಬೆಂಗಳೂರು, ರಾಮನಗರ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ ಸೇರಿದಂತೆ ದಕ್ಷಿಣ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಬಂದ್ ವ್ಯಾಪಕ ಬೆಂಬಲ  ವ್ಯಕ್ತವಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ದಕ್ಷಿಣ ಕನ್ನವಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಗದಗ, ಕೊಪ್ಪಳ, ದಾವಣಗೆರೆ, ಹಾವೇರಿ, ಬಳ್ಳಾರಿಯಲ್ಲಿ ಬಂದ್ ಆಚರಣೆ  ಮಾಡಲಾಗುತ್ತಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಧರಣಿ ನಡೆಸುತ್ತಿವೆ.

ಆದರೆ ಬೀದರ್, ರಾಯಚೂರು, ಚಿತ್ರದುರ್ಗದಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಜನಜೀವನ ಎಂದಿನಂತೆ ಸಾಗಿದೆ. ಈ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಅಂಗಡಿ  ಮುಂಗಟ್ಟುಗಳು ತೆರೆದಿದ್ದು, ಎಂದಿನಂತೆ ವಹಿವಾಟಿನಲ್ಲಿ ತೊಡಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com