ನವದೆಹಲಿ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಮಂಗಳವಾರ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ.
ತಮ್ಮ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣ ರದ್ದು ಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಈ ಬಗ್ಗೆ ಸರ್ಕಾರದ ನಿಲುವು ಸ್ಪಷ್ಟಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ, ವಿಚಾರಣೆಯನ್ನು ಅಕ್ಟೋಬರ್ 18ಕ್ಕೆ ಮುಂದೂಡಿದೆ.
ಪ್ರಕರಣದ ವಿವರ: ಬೆಂಗಳೂರು ಪೂರ್ವ ತಾಲೂಕು ಕೆ.ಆರ್.ಪುರ ಹೋಬಳಿಯ ಬೆನ್ನಿಗಾನಹಳ್ಳಿಯಲ್ಲಿನ ಸರ್ವೆ ನಂ.50/2ರಲ್ಲಿನ 4 ಎಕರೆ 20 ಗುಂಟೆ ಜಮೀನನ್ನು ಡಿ.ಕೆ. ಶಿವಕುಮಾರ್ ನಗರಾಭಿವೃದ್ಧಿ ಸಚಿವರಾಗಿದ್ದಾಗ ಖರೀದಿಸಿದ್ದರು. ನಂತರ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಎಲ್ಲ ದಾಖಲೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳಿಂದ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು.
ಬಳಿಕ ಯಡಿಯೂರಪ್ಪ ತಮ್ಮ ಅಧಿಕಾರಾವಧಿಯಲ್ಲಿ ಡಿ.ಕೆ.ಶಿವಕುಮಾರ್ ಅವರ ಮನವಿ ಮೇರೆಗೆ ಈ ಜಾಗವನ್ನು ಅಕ್ರಮವಾಗಿ ಡಿ-ನೋಟಿಫಿಕೇಷನ್ ಮಾಡಿಸಿದ್ದಾರೆ ಎಂದು ಆರೋಪಿಸಿ ಟಿ.ಜೆ. ಅಬ್ರಾಹಾಂ ಮತ್ತು ಕಬ್ಬಾಳೆಗೌಡ ಎಂಬುವರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.