ಪರಮೇಶ್ವರ
ಪ್ರಧಾನ ಸುದ್ದಿ
ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ವಿದೇಶಿಯರ ಗಡಿಪಾರಿಗೆ ಮುಂದಾದ ರಾಜ್ಯ ಸರ್ಕಾರ
ಗೋವಾ ಸರ್ಕಾರದಂತೆ ರಾಜ್ಯ ಸರ್ಕಾರ ಸಹ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಕರ್ನಾಟಕದಲ್ಲಿರುವ ನೈಜಿರಿಯನ್...
ಬೆಂಗಳೂರು: ಗೋವಾ ಸರ್ಕಾರದಂತೆ ರಾಜ್ಯ ಸರ್ಕಾರ ಸಹ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಕರ್ನಾಟಕದಲ್ಲಿರುವ ನೈಜಿರಿಯನ್ ಪ್ರಜೆಗಳನ್ನು ಅವರ ದೇಶಕ್ಕೆ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಅವರು ಗುರುವಾರ ಹೇಳಿದ್ದಾರೆ.
ಇಂದು ವಿಧಾನ ಪರಿಷತ್ ನಲ್ಲಿ ಬಿಜೆಪಿ ಸದಸ್ಯ ವಿ ಸೋಮಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ ಅವರು, ಡ್ರಗ್ಸ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಲವು ವಿದೇಶಿ ಪ್ರಜೆಗಳು ತಮ್ಮ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಇಲ್ಲಿ ವಾಸಿಸುತ್ತಿದ್ದು, ಅವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣಗಳಿವೆ. ಹೀಗಾಗಿ ಗೋವಾ ಸರ್ಕಾರದ ಮಾದರಿಯಲ್ಲಿ ವಿದೇಶಿಯರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದು ಅವರನ್ನು ಅವರ ದೇಶಕ್ಕೆ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ನಾನು ಗೋವಾ ಸರ್ಕಾರದಿಂದ ಎಲ್ಲಾ ರೀತಿಯ ಮಾಹಿತಿ ಪಡೆದಿದ್ದು, ಶೀಘ್ರದಲ್ಲೇ ಅದನ್ನು ಇಲ್ಲಿಯೂ ಜಾರಿಗೊಳಿಸಲಾಗುವುದು ಎಂದರು.
ಇದೇ ವೇಳೆ ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿರುವ ಹಲವು ವಿದೇಶಿ ವಿದ್ಯಾರ್ಥಿಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಹಲವು ಕಾಲೇಜ್ ಗಳು ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಪಡೆಯದೇ ಪ್ರವೇಶ ನೀಡುತ್ತಿದ್ದು, ಅಂತಹ ಕಾಲೇಜ್ ಗಳಿಗೆ ವಿದೇಶಿ ವಿದ್ಯಾರ್ಥಿಗಳ ಸಂಪೂರ್ಣ ಮಾಹಿತಿ ಪಡೆದು ಸಂಬಂಧಿಸಿದ ಪೊಲೀಸ್ ಠಾಣೆಗಳಿಗೆ ನೀಡುವಂತೆ ಸೂಚಿಸಲಾಗಿದೆ ಎಂದು ಪರಮೇಶ್ವರ ತಿಳಿಸಿದ್ದಾರೆ.
ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ 2015ರಿಂದ ಇದುವರೆಗೆ 23 ನೈಜಿರಿಯನ್ ಪ್ರಜೆಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ ಮತ್ತು 31 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವರು ಸದನಕ್ಕೆ ಮಾಹಿತಿ ನೀಡಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ