

ನ್ಯೂಯಾರ್ಕ್: ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರನ್ನು ಭೇಟಿ ಮಾಡಿ ಅಲ್ಲಿನ ಅಣ್ವಸ್ತ್ರ ಪರೀಕ್ಷೆ ಕುರಿತು ಮಾತುಕತೆ ನಡೆಸುವುದಕ್ಕೆ ಉತ್ಸುಕರಾಗಿರುವುದಾಗಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಸಂಭಾವ್ಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ಸತತ 4 ಬಾರಿ ಅಣ್ವಸ್ತ್ರ ಪರೀಕ್ಷೆ ಮಾಡಿ ವಿಶ್ವ ಸಮುದಾಯದ ಕೆಂಗಣ್ಣಿಗೆ ಗುರಿಯಾಗಿರುವ ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉಂ ಅವರನ್ನು ಭೇಟಿ ಮಾಡಿ ಅಲ್ಲಿನ ಅಣ್ವಸ್ತ್ರ ಪರೀಕ್ಷೆಗಳನ್ನು ನಿಲ್ಲಿಸುವಂತೆ ಮನವೊಲಿಕೆ ಮಾಡಲು ಯತ್ನಿಸುವುದಾಗಿ ಟ್ರಂಪ್ ರಾಯಿಟರ್ಸ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಅಧಿಕಾರಕ್ಕೆ ಬಂದರೆ ಅಮೆರಿಕದ ವಿದೇಶಾಂಗ ನೀತಿಯನ್ನು ಬದಲಾವಣೆ ಮಾಡುತ್ತೇನೆ ಎಂದು ಹೇಳಿದ್ದ ಟ್ರಂಪ್ ಉತ್ತರ ಕೊರಿಯಾದ ನಾಯಕ ಕಿಂ ಜಾಂಗ್ ಉನ್ ಅವರನ್ನು ಭೇಟಿ ಮಾಡಿದರೆ ಚರ್ಚೆ ನಡೆಸುವ ಅಂಶಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿಲ್ಲ. ಆದರೆ ಉತ್ತರ ಕೋರಿಯಾದೊಂದಿಗೆ ಉತ್ತಮ ಸಂಬಂಧ ಹೊಂದಿರುವ ಚೀನಾವನ್ನು ಮುಂದಿಟ್ಟುಕೊಂಡು ಉತ್ತರ ಕೊರಿಯಾದ ಅಣ್ವಸ್ತ್ರ ಪರೀಕ್ಷೆಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಸೂಚನೆ ನೀಡಿದ್ದಾರೆ. ಇನ್ನು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಬಗ್ಗೆಯೂ ಮಾತನಾಡಿರುವ ಟ್ರಂಪ್, ಪೂರ್ವ ಉಕ್ರೇನ್ ನಲ್ಲಿ ವ್ಲಾಡಿಮಿರ್ ಪುಟಿನ್ ಕ್ರಮಗಳು ಸರಿಯಾಗಿಲ್ಲ ಎಂದು ಹೇಳಿದ್ದಾರೆ.