

ವಾಷಿಂಗ್ ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ರಿಪಬ್ಲಿಕನ್ ಪಕ್ಷದಿಂದ ಸ್ಪರ್ಧಿಸಿರುವ ಡೊನಾಲ್ಡ್ ಟ್ರಂಪ್, ತಾವು ಅಧ್ಯಕ್ಷರಾಗಿ ಆಯ್ಕೆಯಾದರೆ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಡಬ್ಲ್ಯೂಎನ್ ಡಿ ರೇಡಿಯೋ ಸ್ಟೇಷನ್ ಗೆ ಸಂದರ್ಶನ ನೀಡಿರುವ ಡೊನಾಲ್ಡ್ ಟ್ರಂಪ್, ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಆಯ್ಕೆಯಾದರೆ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ವ್ಯಕ್ತಿ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ವಿದೇಶದ ಅಧ್ಯಕ್ಷರು ಅಥವಾ ನಾಯಕರನ್ನು ಭೇಟಿ ಮಾಡಿದ ಉದಾಹರಣೆಗಳು ಈ ವರೆಗೆ ಇಲ್ಲ. ನವೆಂಬರ್ 2008 ರಲ್ಲಿ ಅಧ್ಯಕ್ಷರಾಗಿ ಆಯ್ಕೆಗೊಂಡ ಬಳಿಕ ಬರಾಕ್ ಒಬಾಮ ವಿದೇಶಾಂಗ ವ್ಯವಹಾರಗಳಿಂದ ದೂರವೇ ಇದ್ದು ಏಕ ಕಾಲದಲ್ಲಿ ಇಬ್ಬರು ಅಧ್ಯಕ್ಷರು ವಿದೇಶಾಂಗ ವ್ಯವಹಾರಗಳಲ್ಲಿ ತೊಡಗುವುದು ಸೂಕ್ತವಲ್ಲ ಎಂಬ ಸಂದೇಶವನ್ನು ರವಾನಿಸಿದ್ದರು.
ಒಬಾಮ ಬಗ್ಗೆ ಪುಟಿನ್ ಗೆ ಒಳ್ಳೆಯ ಅಭಿಪ್ರಾಯವಿಲ್ಲ. ಆದರೆ ನಾನು ಅಧ್ಯಕ್ಷನಾಗಿ ಆಯ್ಕೆಯಾದರೆ ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನವೇ ರಷ್ಯಾ ಅಧ್ಯಕ್ಷರನ್ನು ಭೇಟಿ ಮಾಡುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ.