ಭಾರತ- ಪಾಕ್ ದ್ವಿಪಕ್ಷೀಯ ಮಾತುಕತೆ ಕರೆಯನ್ನು ಪುನರುಚ್ಚರಿಸಿದ ವಿಶ್ವಸಂಸ್ಥೆ

ವಿಶ್ವಸಂಸ್ಥೆ: ನಿರಂತರ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನದ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಡುತ್ತಿದ್ದು, ಯುದ್ಧ ನಡೆಯುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯಿಸಲು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಬಾನ್ ಕಿ- ಮೂನ್ ಅವರ ವಕ್ತಾರರು ನಿರಾಕರಿಸಿದ್ದಾರೆ.
ಕಾಶ್ಮೀರ ವಿಷಯ ಹಾಗೂ ಭಾರತ- ಪಾಕಿಸ್ತಾನಗಳ ನಡುವಿನ ಸಂಬಂಧದ ಬಗ್ಗೆ ಮಾತನಾಡಿರುವ ಸ್ಟೀಫನ್ ಡುಜರಿಕ್, ಯುದ್ಧ ನಡೆಯುವ ಸಾಧ್ಯತೆಗಳ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದು. ವಿವಾದಗಳನ್ನು ಬಗೆಹರಿಸಿಕೊಳ್ಳಲು ಉಭಯ ರಾಷ್ಟ್ರಗಳು ಮಾತುಕತೆಯಲ್ಲಿ ತೊಡಗಬೇಕು ಎಂಬ ವಿಶ್ವಸಂಸ್ಥೆಯ ಈ ಹಿಂದಿನ ಅಭಿಪ್ರಾಯವನ್ನೇ ಪುನರುಚ್ಚರಿಸಿದ್ದಾರೆ.
ಮಾತುಕತೆ ಮೂಲಕ ವಿವಾದಗಳನ್ನು ಬಗೆಹರಿಸಿಕೊಳ್ಳುವುದೊಂದೇ ಇರುವ ಮಾರ್ಗವಾಗಿದ್ದು, ವಿಶ್ವಸಂಸ್ಥೆ ತನ್ನ ಈ ಹಿಂದಿನ ಅಭಿಪ್ರಾಯಕ್ಕೆ ಬದ್ಧವಾಗಿದೆ ಎಂದು ಸ್ಟೀಫನ್ ಡುಜರಿಕ್ ಪತ್ರಕರ್ತರಿಗೆ ತಿಳಿಸಿದ್ದಾರೆ. ಇನ್ನು ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಅವರ ದೂರುಗಳಿಗೂ ಪ್ರತಿಕ್ರಿಯೆ ನೀಡಿರುವ ವಿಶ್ವಸಂಸ್ಥೆ, ಕಾಶ್ಮೀರ ವಿವಾದವನ್ನು ಬಗೆಹರಿಸಿಕೊಳ್ಳಲು ಇರುವ ಏಕೈಕ ಮಾರ್ಗವೆಂದರೆ ಅದು ದ್ವಿಪಕ್ಷೀಯ ಮಾತುಕತೆಯೊಂದೇ ಎಂದು ತಿಳಿಸಿರುವುದಾಗಿ ಸ್ಟೀಫನ್ ಡುಜರಿಕ್ ಮಾಹಿತಿ ನೀಡಿದ್ದಾರೆ. ವಿಶ್ವಸಂಸ್ಥೆಯ 71 ನೇ ಮಹಾಧಿವೇಶನದಲ್ಲಿ ಭಾಗವಹಿಸಿ ಮಾತನಾಡಿದ್ದ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಕಾಶ್ಮೀರದಲ್ಲಿ ಭಾರತ ನಡೆಸುತ್ತಿರುವ ಮಾನವ ಹಕ್ಕು ಉಲ್ಲಂಘನೆ ಬಗ್ಗೆ ದೂರಿದ್ದರು. ಆದರೆ ವಿಶ್ವಸಂಸ್ಥೆ ಮಾತ್ರ ಕಾಶ್ಮೀರ ವಿವಾದದಲ್ಲಿ ಮಧ್ಯ ಪ್ರವೇಶ ಮಾಡುವುದಿಲ್ಲ, ಪಾಕಿಸ್ತಾನ- ಭಾರತ ವಿವಾದವನ್ನು ಬಗೆಹರಿಸಿಕೊಳ್ಳಲಿ ಎಂದು ಹೇಳಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


