ಬುಚರೆಸ್ಟ್; ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಸಂಭವಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿರುವ ಘಟನೆ ರುಮೇನಿಯಾದ ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ.
ಪಿಯಾಟ್ರಾ ನೀಮ್ಟ್ ಕಂಟ್ರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಶಂಕೆಗಳು ವ್ಯಕ್ತವಾಗಿದ್ದು, ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಕೋಣೆಗಳಿಗೂ ಹರಡಿದೆ. ಪರಿಣಾಮ 10 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಈ ನಡುವೆ ಹೇಳಿಕೆ ನೀಡಿರುವ ಆರೋಗ್ಯ ಸಚಿವ ನೆಲು ಟಾಟಾರು ಅವರು, ಆಸ್ಪತ್ರೆಯಲ್ಲಿ ಉಳಿದಿರುವ ಸೋಂಕಿತರನ್ನು ಪೂರ್ವ ರೊಮೇನಿಯನ್ ನಗರದ ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತದೆಎಂದು ತಿಳಿಸಿದ್ದಾರೆ.
ಘಟನೆಯಲ್ಲಿ ದೇಹದ ಶೇ.40ರಷ್ಟು ತೀವ್ರವಾಗಿ ಸುಟ್ಟು ಗಾಯಗೊಂಡಿರುವ ವೈದ್ಯರನ್ನು ರಾಜಧಾನಿ ಬುಚಾರೆಸ್ಟ್'ನ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
Advertisement