
ಪೇಶಾವರ: ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಪೊಲೀಸ್ ಚೆಕ್ ಪೋಸ್ಟ್ ಅನ್ನು ಗುರಿಯಾಗಿಸಿಕೊಂಡು ಉಗ್ರರು ಶನಿವಾರ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ದಾಳಿಯಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಉತ್ತರ ವಜೀರಿಸ್ತಾನ್ ಜಿಲ್ಲೆಯ ಮೀರ್ ಅಲಿ ತಹಸಿಲ್‌ನಲ್ಲಿರುವ ಅಸ್ಲಾಮ್ ಚೆಕ್ ಪೋಸ್ಟ್‌ನಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ.
ತ್ರಿಚಕ್ರ ವಾಹನದಲ್ಲಿ ಬಂದ ಬಾಂಬರ್‌ಗಳು ಚೆಕ್ ಪೋಸ್ಟ್ ಮತ್ತು ಭದ್ರತಾ ಪಡೆಗಳ ವಾಹನಗಳನ್ನು ಗುರಿಯಾಗಿಸಿ ಬಾಂಬ್ ಸ್ಫೋಟಿಸಿದ್ದಾರೆ. ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ, ಇಬ್ಬರು ಸೈನಿಕರು ಮತ್ತು ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಮೂಲಗಳ ಪ್ರಕಾರ, ಗಾಯಗೊಂಡವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದು. ದಾಳಿಯ ಹೊಣೆಯನ್ನು ಇದುವರೆಗೆ ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ.
ಖೈಬರ್ ಪಖ್ತುಂಖ್ವಾ ರಾಜ್ಯಪಾಲ ಫೈಸಲ್ ಕರೀಂ ಕುಂಡಿ ಅವರು ಈ ದಾಳಿಯನ್ನು ಖಂಡಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ.
Advertisement