
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೀಘ್ರದಲ್ಲೇ ಭಾರತಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ ಮತ್ತು ದಿನಾಂಕಗಳನ್ನು ಬಹುತೇಕ ಅಂತಿಮಗೊಳಿಸಲಾಗಿದೆ ಎಂದು ಮಾಸ್ಕೋಗೆ ಭೇಟಿ ನೀಡಿರುವ ವೇಳೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. ಈಮಧ್ಯೆ, ಆಗಸ್ಟ್ ಅಂತ್ಯದಲ್ಲಿ ಪುಟಿನ್ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ರಷ್ಯಾದ ಸುದ್ದಿ ಸಂಸ್ಥೆ ಇಂಟರ್‌ಫ್ಯಾಕ್ಸ್ ವರದಿ ಮಾಡಿದೆ
'ಆಗಸ್ಟ್ ಅಂತ್ಯದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್ ನಮ್ಮ ದೇಶಕ್ಕೆ ಭೇಟಿ ನೀಡುವ ಬಗ್ಗೆ ತಿಳಿದು ನಮಗೆ ಸಂತೋಷವಾಯಿತು' ಎಂದು ರಷ್ಯಾದ ಭದ್ರತಾ ಮಂಡಳಿಯ ಕಾರ್ಯದರ್ಶಿ ಸೆರ್ಗೆಯ್ ಶೋಯಿಗು ಅವರೊಂದಿಗಿನ ಸಭೆಯಲ್ಲಿ ದೋವಲ್ ಹೇಳಿರುವುದಾಗಿ ಸ್ಪುಟ್ನಿಕ್ ಇಂಡಿಯಾ ಉಲ್ಲೇಖಿಸಿದೆ.
ಮಾಸ್ಕೋ ಜೊತೆಗಿನ ಭಾರತದ ವ್ಯಾಪಾರ ಸಂಬಂಧಗಳ ಕುರಿತು ಭಾರತ ಮತ್ತು ಅಮೆರಿಕ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ರಷ್ಯಾ ಅಧ್ಯಕ್ಷ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವರದಿಯಾಗಿದೆ. ರಷ್ಯಾದಿಂದ ತೈಲ ಖರೀದಿಸುವ ವಿಚಾರವಾದಿ ಅಮೆರಿಕದ ಬೆದರಿಕೆಗೆ ಮಣಿಯದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕವು ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಹೆಚ್ಚುವರಿಯಾಗಿ ಶೇ 25 ರಷ್ಟು ಸುಂಕ ಹೇರುವ ಕಾರ್ಯಕಾರಿ ಆದೇಶಕ್ಕೆ ಬುಧವಾರ ಸಹಿ ಹಾಕಿದ್ದಾರೆ.
ರಷ್ಯಾದಿಂದ ತೈಲ ಖರೀದಿಸುವ ಮೂಲಕ ಭಾರತವು, ಉಕ್ರೇನ್ ವಿರುದ್ಧದ ಯುದ್ಧಕ್ಕೆ ರಷ್ಯಾಕ್ಕೆ ಆರ್ಥಿಕ ನೆರವು ಒದಗಿಸುತ್ತಿದೆ ಎಂದು ಟ್ರಂಪ್ ದೂರಿದ್ದಾರೆ. ಉಕ್ರೇನ್ ಮತ್ತು ರಷ್ಯಾ ಸಂಘರ್ಷ ನಾಲ್ಕನೇ ವರ್ಷಕ್ಕೆ ಕಾಲಿಟ್ಟಿದ್ದು, ಯುದ್ಧವನ್ನು ನಿಲ್ಲಿಸಲು ಒಪ್ಪದಿದ್ದರೆ, ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ ಮತ್ತಷ್ಟು ಆರ್ಥಿಕ ನಿರ್ಬಂಧಗಳನ್ನು ಹೇರಲಾಗುವುದು ಎಂದು ಅಮೆರಿಕ ಎಚ್ಚರಿಸಿದೆ ಮತ್ತು ಶುಕ್ರವಾರದವರೆಗೆ ಗಡುವು ನೀಡಿದೆ.
ಈಮಧ್ಯೆ, ರಷ್ಯಾ-ಉಕ್ರೇನ್ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮುಂದಿನ ವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಖುದ್ದಾಗಿ ಭೇಟಿಯಾಗಬಹುದು ಎಂದು ಶ್ವೇತಭವನದ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಇತ್ತ, ಪುಟಿನ್ ಕೂಡ ಅಮೆರಿಕ ಅಧ್ಯಕ್ಷ ಟ್ರಂಪ್ ಅವರೊಂದಿಗಿನ ಸಭೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಕ್ರೆಮ್ಲಿನ್ ಗುರುವಾರ ದೃಢಪಡಿಸಿದೆ.
ರಷ್ಯಾದ ಅಧ್ಯಕ್ಷೀಯ ಸಲಹೆಗಾರ ಯೂರಿ ಉಷಾಕೋವ್, ಉಭಯ ದೇಶಗಳ ನಾಯಕರು ಸಭೆಯನ್ನು ಅಂತಿಮಗೊಳಿಸುವ ಕೆಲಸ ಮಾಡುತ್ತಿದ್ದಾರೆ. ಸಭೆ ನಡೆಯುವ ಸ್ಥಳವನ್ನು ಈಗಾಗಲೇ ಒಪ್ಪಿಕೊಂಡಿದ್ದು, ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು ರಷ್ಯಾ, ಟ್ರಂಪ್ ಅವರ ನಿಲುವನ್ನು ಟೀಕಿಸಿತು ಮತ್ತು ವ್ಯಾಪಾರ ನಿರ್ಧಾರಗಳಲ್ಲಿ ಭಾರತದ ಸ್ವಾಯತ್ತತೆಗೆ ಬೆಂಬಲ ನೀಡುವುದಾಗಿ ಪುನರುಚ್ಚರಿಸಿತು.
'ಸಾರ್ವಭೌಮ ರಾಷ್ಟ್ರಗಳು ತಮ್ಮದೇ ಆದ ವ್ಯಾಪಾರ ಪಾಲುದಾರರನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿವೆ. ರಷ್ಯಾದೊಂದಿಗಿನ ವ್ಯಾಪಾರ ಸಂಬಂಧಗಳನ್ನು ಕಡಿತಗೊಳಿಸುವಂತೆ ರಾಷ್ಟ್ರಗಳ ಮೇಲೆ ಒತ್ತಡ ಹೇರುವ ಪ್ರಯತ್ನಗಳು 'ನ್ಯಾಯಸಮ್ಮತವಲ್ಲ' ಎಂದು ಕ್ರೆಮ್ಲಿನ್ ವಕ್ತಾರ ಡಿಮಿಟ್ರಿ ಪೆಸ್ಕೋವ್ ಹೇಳಿದರು.
Advertisement